ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಕೋಣಂದೂರಿನ ಎನ್‌ಆರ್‌ಎಸ್ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿ ಶುಕ್ರವಾರ (ಜು.24) ರಾತ್ರಿ ಊಟ ಸೇವಿಸಿದ ಬಳಿಕ ಹಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ.
ವಿದ್ಯಾರ್ಥಿಗಳಿಗೆ ವಾಂತಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ತಕ್ಷಣ ಕೋಣಂದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆಸ್ಪತ್ರೆಯಲ್ಲಿ ವೈದ್ಯರು ವಿದ್ಯಾರ್ಥಿಗಳ ಆರೋಗ್ಯ ಪರಿಶೀಲನೆ ನಡೆಸಿ ಅಗತ್ಯ ಚಿಕಿತ್ಸೆ ನೀಡಿದರು. ಬಳಿಕ ಪೋಷಕರ ಮನವಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಸುಮಾರು 20 ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ವೈದ್ಯಕೀಯ ಮೇಲ್ವಿಚಾರಣೆಗಾಗಿ ರವಾನಿಸಲಾಯಿತು.

ವೈದ್ಯಕೀಯ ಮೂಲಗಳ ಪ್ರಕಾರ, ಯಾವುದೇ ವಿದ್ಯಾರ್ಥಿಯ ಆರೋಗ್ಯದಲ್ಲಿ ಗಂಭೀರ ಸಮಸ್ಯೆ ಕಂಡುಬಂದಿಲ್ಲ. ಎಲ್ಲರನ್ನೂ ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯರ ವೀಕ್ಷಣೆಯಲ್ಲಿ ಇರಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಶ್ರೀ ಜಯಚಾಮರಾಜೇಂದ್ರ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಕುರುವಳ್ಳಿ ನಾಗರಾಜ್ ಮಧ್ಯರಾತ್ರಿಯಲ್ಲೇ ಆಸ್ಪತ್ರೆಗೆ ಭೇಟಿ ನೀಡಿ, ತುರ್ತು ಸೇವೆಗಾಗಿ ಖಾಸಗಿ ಅಂಬುಲೆನ್ಸ್‌ಗಳ ವ್ಯವಸ್ಥೆ ಮಾಡಿದರು.

ಮಕ್ಕಳ ತಜ್ಞರಾದ ಡಾ. ಸುಪ್ರೀತ್, ಡಾ. ಸುಮಾ ಹಾಗೂ ಆಸ್ಪತ್ರೆಯ ಸಿಬ್ಬಂದಿ ತಕ್ಷಣ ಸ್ಪಂದಿಸಿ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಆರೈಕೆ ನೀಡಿದ್ದಾರೆ. ಪ್ರಸ್ತುತ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
















