
ಜನತಾದಳ (ಜಾತ್ಯಾತೀತ) ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಸುಧಾಕರ್ ಎಸ್. ಶೆಟ್ಟಿಯವರನ್ನು ನೇಮಕ ಮಾಡಿ ಪಕ್ಷವು ಅಧಿಕೃತ ಆದೇಶ ಹೊರಡಿಸಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಕೊಪ್ಪ, ಶೃಂಗೇರಿ ತಾಲ್ಲೂಕಿನ ಜನತಾದಳ (ಜಾತ್ಯಾತೀತ) ಪಕ್ಷದ ನಾಯಕ ಹಾಗೂ ಎಫ್‌ಕೆಸಿಸಿಐ (FKCCI) ಮಾಜಿ ಅಧ್ಯಕ್ಷರಾದ ಸುಧಾಕರ್ ಶೆಟ್ಟಿಯವರನ್ನು ಪಕ್ಷದ ಪರವಾಗಿ ರಾಷ್ಟ್ರಮಟ್ಟದ ದೂರದರ್ಶನ ವಾಹಿನಿಗಳು, ಡಿಜಿಟಲ್ ಮಾಧ್ಯಮ ವೇದಿಕೆಗಳು ಹಾಗೂ ಸಾರ್ವಜನಿಕ ವೇದಿಕೆಗಳಲ್ಲಿ ಪಕ್ಷವನ್ನು ಪ್ರತಿನಿಧಿಸುವ ಮತ್ತು ಜನತಾದಳ (ಜಾತ್ಯಾತೀತ) ಪಕ್ಷದ ಅಧಿಕೃತ ನಿಲುವುಗಳು, ನೀತಿಗಳು ಹಾಗೂ ಅಭಿಪ್ರಾಯಗಳನ್ನು ಪ್ರಕಟಿಸುವ ಅಧಿಕಾರವನ್ನು ನೀಡಿ ಜೆಡಿಎಸ್ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.


ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಯುವ ನಾಯಕ ನಿಖಿಲ್ ಕುಮಾರಸ್ವಾಮಿಯವರ ಶಿಫಾರಸಿನ ಮೇರೆಗೆ ಈ ನೇಮಕಾತಿ ನಡೆದಿದೆ. ಜೆಡಿಎಸ್ ಪಕ್ಷವನ್ನು ರಾಷ್ಟ್ರೀಯ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ಹಾಗೂ ಸಾರ್ವಜನಿಕ ವೇದಿಕೆಗಳಲ್ಲಿ ನಿಷ್ಠೆಯಿಂದ ಪ್ರತಿನಿಧಿಸುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಸುಧಾಕರ್ ಎಸ್. ಶೆಟ್ಟಿ ಹೇಳಿದರು.
“ಈ ನೇಮಕಾತಿಗೆ ಸಹಕರಿಸಿದ ಪಕ್ಷದ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಶೃಂಗೇರಿ ಕ್ಷೇತ್ರದ ಜನತೆಗೆ ಧನ್ಯವಾದಗಳು. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಬೆಂಬಲವೇ ನನ್ನ ಮುಂದಿನ ಕಾರ್ಯಪಥಕ್ಕೆ ಶಕ್ತಿಯಾಗಿದೆ. ಈ ನಂಬಿಕೆಗೆ ನಾನು ಸದಾ ಚಿರಋಣಿಯಾಗಿರುತ್ತೇನೆ.” — ಸುಧಾಕರ್ ಎಸ್. ಶೆಟ್ಟಿ















