ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸುಧೀರ್ ಕುಮಾರ್ ಮುರೊಳ್ಳಿ ಹೆಸರು ಮುನ್ನೆಲೆಗೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಕುರಿತ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಯುವ ಕಾಂಗ್ರೆಸ್ ನಾಯಕ ಹಾಗೂ ವಕೀಲ ಸುಧೀರ್ ಕುಮಾರ್ ಮುರೊಳ್ಳಿ ಅವರ ಹೆಸರು ಕಾರ್ಯಕರ್ತರ ವಲಯದಲ್ಲಿ ಪ್ರಮುಖವಾಗಿ ಕೇಳಿಬರುತ್ತಿದೆ.

ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಮುರೊಳ್ಳಿ, ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಕೆಲಸ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಪಕ್ಷದ ತಳಮಟ್ಟದ ಸಂಘಟನೆಗೆ ಆದ್ಯತೆ ನೀಡಿರುವ ಅವರು, ಯುವಕರನ್ನು ಕಾಂಗ್ರೆಸ್‌ನತ್ತ ಸೆಳೆಯುವ ಪ್ರಯತ್ನ ನಡೆಸಿದ್ದಾರೆ ಎನ್ನುವುದು ಕಾರ್ಯಕರ್ತರ ಅಭಿಪ್ರಾಯವಾಗಿದೆ. ಕಳೆದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೂ ಉಡುಪಿ–ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಅವರ ಹೆಸರನ್ನು ಕೆಲವು ಹಿರಿಯ ನಾಯಕರು ಪ್ರಸ್ತಾಪಿಸಿದ್ದರು ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬಂದಿದ್ದವು. ಆದರೆ ಅಂತಿಮವಾಗಿ ಪಕ್ಷವು ಬೇರೆ ಅಭ್ಯರ್ಥಿಗೆ ಅವಕಾಶ ನೀಡಿತ್ತು.

ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಜವಾಬ್ದಾರಿ ನೀಡಿದರೆ ಪಕ್ಷ ಸಂಘಟನೆಗೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯವನ್ನು ಕೆಲವು ಕಾರ್ಯಕರ್ತರು ವ್ಯಕ್ತಪಡಿಸುತ್ತಿದ್ದಾರೆ. ಆದರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಕುರಿತು ಅಂತಿಮ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಕೈಗೊಳ್ಳಬೇಕಿದ್ದು, ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.