ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ರವಾಸಿಗರಿದ್ದ ಟೆಂಪೋ ಟ್ಯಾವೆಲರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸೀತಾಳಯ್ಯನಗಿರಿ ಬಳಿ ನಡೆದಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ 13 ಮಂದಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು ಮೂಲದ ಪ್ರವಾಸಿಗರು ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದರು. ಮುಳ್ಳಯ್ಯನಗಿರಿಯ ಇಳಿಜಾರು ಪ್ರದೇಶದಲ್ಲಿ ವಾಹನ ಚಲಿಸುತ್ತಿದ್ದ ವೇಳೆ ಚಾಲಕನ ಚಪ್ಪಲಿ ಬ್ರೇಕ್ ಹಾಗೂ ಎಕ್ಸಲೇಟರ್ ಮಧ್ಯೆ ಸಿಲುಕಿಕೊಂಡಿದೆ ಎನ್ನಲಾಗಿದೆ. ಇದರಿಂದ ಗಾಬರಿಗೊಂಡ ಚಾಲಕ ಚಪ್ಪಲಿಯನ್ನು ತೆಗೆಯಲು ಯತ್ನಿಸಿದ ವೇಳೆ ವಾಹನ ನಿಯಂತ್ರಣ ತಪ್ಪಿ ನ್ಯೂಟ್ರಲ್ ಆಗಿ ಕಂದಕಕ್ಕೆ ಉರುಳಿದೆ.

ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ವಾಹನದಲ್ಲಿದ್ದ ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












