ಆನೆ ಓಡಿಸುವ ಕಾರ್ಯಾಚರಣೆಗೆ ಮೂವರು ಶಾಸಕರ ರಾಜೀನಾಮೆ ಎಚ್ಚರಿಕೆ!

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆಗಳ ಸ್ಥಳಾಂತರ ವಿಚಾರ ಇದೀಗ ಮಲೆನಾಡಿನ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯದತ್ತ ಓಡಿಸುವ ಅರಣ್ಯ ಇಲಾಖೆಯ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿರುವ ಮಲೆನಾಡಿನ ಮೂವರು ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಹೌದು, ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಈ ವಿಚಾರದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವೆಂಬರ್ 25ರವರೆಗೆ ಯಾವುದೇ ಆನೆ ಓಡಿಸುವ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಅರಣ್ಯ ಇಲಾಖೆ ಭರವಸೆ ನೀಡಿತ್ತು ಎನ್ನಲಾಗಿದ್ದು, ಆದರೆ ಭರವಸೆಯ ನಡುವೆಯೇ ಮೂಡಿಗೆರೆ ಭಾಗದಲ್ಲಿ ಆನೆ ಓಡಿಸುವ ಕಾರ್ಯಾಚರಣೆ ನಡೆದಿರುವುದು ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಪರಿಣಾಮ ಗೋಣಿಬೀಡು ಹೋಬಳಿಯ 20ಕ್ಕೂ ಅಧಿಕ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ ಎಂಬ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕಿ ನಯನಾ ಮೋಟಮ್ಮ ಹಾಗೂ ಶಾಸಕ ಟಿ.ಡಿ. ರಾಜೇಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿಗಮ ಮಂಡಳಿ ಸ್ಥಾನಗಳ ಹಂಚಿಕೆಯ ಅಸಮಾಧಾನವೂ ಇದೆಯೇ?:
ಇನ್ನೊಂದೆಡೆ, ಈ ರಾಜಕೀಯ ಬೆಳವಣಿಗೆಯ ನಡುವೆ ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆಯ ವಿಚಾರವೂ ಚರ್ಚೆಗೆ ಬಂದಿದೆ. ಶಾಸಕಿ ನಯನಾ ಮೋಟಮ್ಮ ಹಾಗೂ ಹೆಚ್.ಡಿ. ತಮ್ಮಯ್ಯ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು ಎಂಬ ಮಾತುಗಳಿದ್ದವು. ಸಚಿವ ಸ್ಥಾನ ಸಿಗದಿದ್ದರೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ದೊರೆಯುವ ನಿರೀಕ್ಷೆಯಲ್ಲಿದ್ದರು ಎನ್ನಲಾಗಿದೆ.

ಆದರೆ ಇತ್ತೀಚೆಗೆ ಪ್ರಕಟವಾದ ನಿಗಮ ಮಂಡಳಿ ನೇಮಕಾತಿ ಪಟ್ಟಿಯಲ್ಲಿ ತರೀಕೆರೆ ಶಾಸಕ ಜಿ.ಎಸ್. ಶ್ರೀನಿವಾಸ್ ಅವರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಇದರಿಂದ ಇತರ ಆಕಾಂಕ್ಷಿಗಳಲ್ಲಿ ಅಸಮಾಧಾನ ಮೂಡಿದೆಯೇ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಜೀವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ವಜಾ: ರಾಜಕೀಯ ಚರ್ಚೆಗೆ ಮತ್ತೊಂದು ತಿರುವು!:
ಇದೇ ಸಂದರ್ಭದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಎನ್. ಜೀವರಾಜ್ ವಿರುದ್ಧ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಶಾಸಕ ಟಿ.ಡಿ. ರಾಜೇಗೌಡ ಅವರ ಚುನಾವಣಾ ಏಜೆಂಟ್ ಸುಧೀರ್ ಕುಮಾರ್ ಮುರೊಳ್ಳಿ ನೀಡಿದ್ದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ಇದೀಗ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಿರುವುದು ಶೃಂಗೇರಿ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದೆ. ಆದರೆ 2023ರ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದ ಮರು ಮತ ಎಣಿಕೆ ವಿವಾದ ಸುಪ್ರೀಂಕೋರ್ಟ್‌ನಲ್ಲಿ ಇನ್ನೂ ವಿಚಾರಣೆಯಲ್ಲಿದೆ. ಕೋರ್ಟ್‌ ನಲ್ಲಿ ಪ್ರಕರಣ ಇರುವ ಕಾರಣ ಇದೀಗ ಶಾಸಕ ಟಿ. ಡಿ ರಾಜೇಗೌಡ, ಅಧಿಕಾರ ಹಂಚಿಕೆಯ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ನಯನಾ ಮೋಟಮ್ಮ ಹಾಗೂ ಹೆಚ್.ಡಿ. ತಮ್ಮಯ್ಯ ಅವರ ಜೊತೆ ಸೇರಿದ್ದಾರೆ ಎನ್ನಲಾಗಿದೆ.

ಒಂದೆಡೆ ಕಾಡಾನೆಗಳ ಸಮಸ್ಯೆಯಿಂದ ಮಲೆನಾಡಿನ ಜನರ ಜೀವ ಹಾಗೂ ಕೃಷಿ ಬೆಳೆಗಳ ರಕ್ಷಣೆಯ ಪ್ರಶ್ನೆ ಎದುರಾಗಿದ್ದರೆ, ಮತ್ತೊಂದೆಡೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕರ ಅಸಮಾಧಾನವೂ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹೈಕಮಾಂಡ್ ಈ ಬೆಳವಣಿಗೆಯನ್ನು ಹೇಗೆ ನಿಭಾಯಿಸಲಿದ್ದಾರೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿದೆ.

ಆನೆಗಳ ಸ್ಥಳಾಂತರದ ವಿಚಾರವೇ ಈ ಅಸಮಾಧಾನದ ಪ್ರಮುಖ ಕಾರಣವೇ? ಅಥವಾ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಹಾಗೂ ಪಕ್ಷದೊಳಗಿನ ಅಧಿಕಾರ ಹಂಚಿಕೆಯ ಅಸಮಾಧಾನವೂ ಇದರ ಹಿಂದೆ ಕೆಲಸ ಮಾಡುತ್ತಿದೆಯೇ? ಈ ಪ್ರಶ್ನೆಗಳಿಗೆ ಮೂವರು ಶಾಸಕರ ಮುಂದಿನ ರಾಜಕೀಯ ಬೆಳವಣಿಗೆಗಳು ಉತ್ತರ ನೀಡಬೇಕಿದೆ. (ಅಭಿನವ್ ಶೃಂಗೇರಿ, ನ್ಯೂಸ್ ಮಲ್ನಾಡ್)

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.