ನೀಟ್ ಹಗರಣ ಖಂಡಿಸಿ ಜಯಪುರದಲ್ಲಿ ಪಂಜಿನ ಮೆರವಣಿಗೆ

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್‌ನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಜಯಪುರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಹರೀಷ್ ಜಯಪುರ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿದರು. ವೈದ್ಯರಾಗುವ ಕನಸು ಹೊತ್ತ ಅನೇಕ ವಿದ್ಯಾರ್ಥಿಗಳ ಕನಸು ಭಗ್ನಗೊಂಡಿದ್ದು, ಈ ಬೆಳವಣಿಗೆಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಟೀಕಿಸಿದರು.

ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಅವರ ಮೇಲೆ ಲಾಠಿಚಾರ್ಜ್ ನಡೆಸಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಬಂಧಿತ ವಿದ್ಯಾರ್ಥಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಮಲೆನಾಡು ರೈತ ಕಾರ್ಮಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಅತ್ತಿಕುಳಿ ಸುಂದರೇಶ್ ಮಾತನಾಡಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡನೀಯವಾಗಿದೆ ಎಂದರು. ಕೇಂದ್ರ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದು, ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.

ಜನಶಕ್ತಿ ಸಂಘಟನೆಯ ಮುಖಂಡ ಕೌಳಿ ರಾಮು ಮಾತನಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನ್ಯಾಯವಾಗಿದೆ. ಇಷ್ಟೊಂದು ದೊಡ್ಡ ಹಗರಣ ನಡೆದಿದ್ದರೂ ಕೇಂದ್ರ ಸರ್ಕಾರ ಯಾವುದೇ ನೈತಿಕ ಹೊಣೆ ಹೊತ್ತಿಲ್ಲ ಎಂದು ಟೀಕಿಸಿದರು. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಅಮಾನವೀಯವಾಗಿದ್ದು, ಅದನ್ನು ಖಂಡಿಸುವುದಾಗಿ ಹೇಳಿದರು.

ಪಂಜಿನ ಮೆರವಣಿಗೆಯಲ್ಲಿ ಕುಕ್ಕುಡಿಗೆ ರವೀಂದ್ರ, ಸುಭಾಷ್, ಸೋಮಶೇಖರ್ ತೆಂಗಿನಮನೆ, ಇಸ್ಮಾಯಿಲ್, ಅನಿಲ್ ಡಿಮೆಲ್ಲೋ, ಪ್ರವೀಣ್ ಜಲ್ಮಾರ, ಸಂದೀಪ್ ಜಲದುರ್ಗ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. (ವರದಿ: ಶಶಿ ಬೆತ್ತದಕೊಳಲು)

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.