ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ದುಬಾರೆ ಆನೆ ಬಿಡಾರದಲ್ಲಿ ಎರಡು ಆನೆಗಳ ನಡುವಿನ ಕಾದಾಟದ ಸಂದರ್ಭದಲ್ಲಿ ಹೊರ ರಾಜ್ಯದ ಮಹಿಳಾ ಪ್ರವಾಸಿಗರೊಬ್ಬರು ಸಿಕ್ಕಿಹಾಕಿಕೊಂಡು ಸಾವನ್ನಪ್ಪಿದ ಬೆನ್ನಲ್ಲೇ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ನಾಳೆಯಿಂದ (ಮೇ 22) ತಾತ್ಕಾಲಿಕವಾಗಿ ಪ್ರವೇಶವನ್ನು ನಿಷೇಧಿಸಲು ಅರಣ್ಯ ಇಲಾಖೆ ಮುಂದಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ಆನೆಗಳ ನಡುವಿನ ಗುದ್ದಾಟದ ಸಂದರ್ಭದಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಜಿನ್ನು (33) ಎಂಬುವವರು ಮೃತಪಟ್ಟಿದ್ದರು. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆಯು, ಆನೆ ಬಿಡಾರಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣವಾಗಿರುವ ಸಕ್ರೆಬೈಲು ಆನೆ ಬಿಡಾರಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧೆಡೆಯಿಂದ ಆನೆಗಳನ್ನು ನೋಡಲು ಅಪಾರ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಾರೆ. ಬಂದತಂಹ ಪ್ರವಾಸಿಗರು ಆನೆಗಳಿಗೆ ಸ್ನಾನ ಮಾಡಿಸುವುದು ಮತ್ತು ಅವುಗಳನ್ನು ಮುಟ್ಟುವುದು ಮಾಡುತ್ತಾರೆ. ದುಬಾರೆ ಆನೆ ಬಿಡಾರದ ದುರಂತದ ನಂತರ ಆನೆಗಳಿಗೆ ಸ್ನಾನ ಮಾಡಿಸುವ ವ್ಯವಸ್ಥೆ ಬಂದ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದುಬಾರೆಯಲ್ಲಿ ನಡೆದ ಘಟನೆ ಸಕ್ರೆಬೈಲು ಆನೆ ಬಿಡಾರದಲ್ಲಿ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಮಹತ್ವದ ನಿರ್ಧಾರವನ್ನು ಅರಣ್ಯ ಇಲಾಖೆ ಕೈಗೊಂಡಿದೆ.

ಸಕ್ರೆಬೈಲು ಆನೆ ಬಿಡಾರವು ಇಂದಿನಿಂದಲೇ ಮುಚ್ಚಬೇಕಿತ್ತು. ಆದರೆ ಇಂದು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದರಿಂದ ಅವರಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ನಾಳೆಯಿಂದ ಕೆಲ ದಿನಗಳ ಕಾಲ ತಾತ್ಕಾಲಿಕವಾಗಿ ಬಂದ್ ಆಗಿರಲಿದೆ. ಸದ್ಯ ಸಕ್ರೆಬೈಲು ಆನೆ ಬಿಡಾರದಲ್ಲಿ 24 ಆನೆಗಳಿವೆ. 19 ಗಂಡು ಆನೆಗಳು 5 ಹೆಣ್ಣು ಆನೆಗಳು ಆನೆ ಬಿಡಾರದಲ್ಲಿವೆ. ಆನೆಗಳಿಗೆ ಸ್ನಾನ ಮಾಡಿಸುವ ಜಾಗದಿಂದ 50 ಮೀಟರ್ ದೂರದಲ್ಲಿ ಆನೆಗಳನ್ನು ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.