
ಶ್ರವಣಬೆಳಗೊಳ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಸ್ಕೂಟರ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಶ್ರವಣಬೆಳಗೊಳ ಹೋಬಳಿಯ ಚಲ್ಯಾ ಗ್ರಾಮದ ಕುಮಾರ್ (56) ಹಾಗೂ ಅವರ ಪತ್ನಿ ರಾಧಾ (46) ಎಂದು ಗುರುತಿಸಲಾಗಿದೆ.
ದಂಪತಿ ಬಾಹುಬಲಿ ಎಂಜಿನಿಯರಿಂಗ್ ಕಾಲೇಜು ಕಡೆಯಿಂದ ಸ್ಕೂಟರ್ನಲ್ಲಿ ಬರುತ್ತಿದ್ದ ವೇಳೆ, ಶ್ರವಣಬೆಳಗೊಳ ಪಟ್ಟಣದ ಕಡೆಯಿಂದ ಬರುತ್ತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರಾಧಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕುಮಾರ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

ಘಟನೆಯಿಂದ ಚಲ್ಯಾ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
















