ಕಡೂರು: (ನ್ಯೂಸ್ ಮಲ್ನಾಡ್ ವರದಿ) ಪೂಜೆ ಮುಗಿಸಿ ಅರ್ಚಕರನ್ನು ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಂಚನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟ್ಟೇನಹಳ್ಳಿ ಗೇಟ್ ಸಮೀಪ ನಡೆದಿದೆ. ಬಿಟ್ಟೇನಹಳ್ಳಿ ಗ್ರಾಮದ ಮಂಜುನಾಥ್ (45) ಹಾಗೂ ಅರ್ಚಕ ಸೋಮಶೇಖರಯ್ಯ (70) ಗಾಯಗೊಂಡವರು.
ಮಂಜುನಾಥ್ ಅವರು ಹೊಸ ಕೋಳಿ ಫಾರಂನ ಪೂಜೆ ಮುಗಿಸಿ ಅರ್ಚಕ ಸೋಮಶೇಖರಯ್ಯ ಅವರನ್ನು ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಇಬ್ಬರ ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ತೀವ್ರ ಗಾಯಗಳಾಗಿವೆ. ಸ್ಥಳೀಯರು ಹಾಗೂ ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ತಕ್ಷಣ ಪಂಚನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಹಾಸನದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಪಂಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













