ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ದರ್ಗಾಕ್ಕೆ ತೆರಳುತ್ತಿದ್ದ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಮಹಿಳೆಯ ಗಂಡ ಮತ್ತು ಆತನ ಸ್ನೇಹಿತರ ತಂಡ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ದರ್ಗಾ ಸಮೀಪ ನಡೆದಿದೆ.
ಬೇಲೂರು ಟೌನ್ ನಿವಾಸಿ ಮಹಿಳೆಯೊಬ್ಬರು ತಮ್ಮ ಕುಟುಂಬದ ಸದಸ್ಯರೊಂದಿಗೆ ಕಾರಿನಲ್ಲಿ ಮಂಗಳೂರು ದರ್ಗಾಕ್ಕೆ ತೆರಳುತ್ತಿದ್ದರು. ಈ ವೇಳೆ ಮಹಿಳೆಯ ಗಂಡ ಸೈಯದ್ ಆಸಿಫ್ ಆತನ ಸ್ನೇಹಿತರಾದ ಆಶಿಮ್, ವಾಸಿಕ್, ಪವನ್ ಹಾಗೂ ಶಿಫಾನ್ ಜೊತೆ ಮತ್ತೊಂದು ಕಾರಿನಲ್ಲಿ ಅವರನ್ನು ಹಿಂಬಾಲಿಸಿಕೊಂಡು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾರಿನಲ್ಲಿದ್ದ ಮಹಿಳೆಯ ತಲೆಕೂದಲು ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಗಲಾಟೆ ಬಿಡಿಸಲು ಮುಂದಾದ ಮಹಿಳೆಯ ಕುಟುಂಬಸ್ಥರ ಮೇಲೂ ಸೈಯದ್ ಆಸಿಫ್ ಹಾಗೂ ಆತನ ಸ್ನೇಹಿತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ರಸ್ತೆಯಲ್ಲಿ ಸಾರ್ವಜನಿಕರು ಹಾಗೂ ಇತರೆ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ಆರೋಪಿಗಳು ಪ್ರಾಣ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಕುಟುಂಬಸ್ಥರು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.













