
ನರಸಿಂಹರಾಜಪುರ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲೇ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಗುರುವಾರ ನಡೆದಿದೆ.
ತರೀಕೆರೆ ತಾಲ್ಲೂಕಿನ ಕಲ್ಲೇನಹಳ್ಳಿ ಗ್ರಾಮದ ನಿವಾಸಿ ಗೀತಾ (32) ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ. ಅವರು ಗುರುವಾರ ಬೆಳಿಗ್ಗೆ ತಮ್ಮ ಮಗಳನ್ನು ಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಿಡಲು ಗ್ರಾಮದಿಂದ ಬಂದಿದ್ದರು. ಮಗಳನ್ನು ಶಾಲೆಗೆ ಬಿಟ್ಟು ಮಧ್ಯಾಹ್ನ ಊರಿಗೆ ಮರಳಲು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನರಸಿಂಹರಾಜಪುರದ ಬಸ್ ನಿಲ್ದಾಣದಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದೆ.
ಈ ವೇಳೆ ಮೂತ್ರ ವಿಸರ್ಜನೆಗೆಂದು ಸಾರ್ವಜನಿಕ ಶೌಚಾಲಯಕ್ಕೆ ತೆರಳಿದಾಗ ಅಲ್ಲಿಯೇ ಹೆರಿಗೆಯಾಗಿದೆ. ವಿಷಯ ತಿಳಿದ ಶೌಚಾಲಯದ ನಿರ್ವಹಣಾ ಸಿಬ್ಬಂದಿ ಸಮಾಜ ಸೇವಕಿ ಜುಬೇದಾ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಜುಬೇದಾ ಅವರು ತಾಯಿ ಮತ್ತು ಮಗುವನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.

ಆಸ್ಪತ್ರೆಗೆ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಕುರಿತು ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ. ಮಹೀಂದ್ರ ಕೀರಿಟ್ ಮಾತನಾಡಿ, ತೀವ್ರ ರಕ್ತಸ್ರಾವವಾಗಿದ್ದರಿಂದ ತಾಯಿ ಮತ್ತು ಮಗುವಿಗೆ ಚಿಕಿತ್ಸೆ ನೀಡಲಾಗಿದೆ. ಮಗು 3.6 ಕೆ.ಜಿ. ತೂಕವಿದ್ದು, ಸದ್ಯ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಮಹಿಳೆ ನೀಡಿದ ಮಾಹಿತಿ ಆಧರಿಸಿ ತರೀಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಮಾಹಿತಿ ನೀಡಲಾಗಿದೆ. ಗರ್ಭಾವಸ್ಥೆಯಲ್ಲಿ ಆಸ್ಪತ್ರೆಯಲ್ಲಿ ನೋಂದಣಿ ಮಾಡಿಸಿರುವ ಬಗ್ಗೆ ಹಾಗೂ ತಾಯಿ ಕಾರ್ಡ್ ಕುರಿತು ಗ್ರಾಮದ ಆಶಾ ಕಾರ್ಯಕರ್ತೆಯರಿಂದ ಮಾಹಿತಿ ಕೇಳಲಾಗಿದೆ ಎಂದು ತಿಳಿಸಿದ್ದಾರೆ.













