ಕಳಸ: (ನ್ಯೂಸ್ ಮಲ್ನಾಡ್ ವರದಿ) ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ 52 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ನಡೆದಿದೆ.
ಮೃತರನ್ನು ಶೀಲಾ (52) ಎಂದು ಗುರುತಿಸಲಾಗಿದೆ. ಶೀಲಾ ಅವರು ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಏಕಾಏಕಿ ಕಾಡುಕೋಣ ದಾಳಿ ನಡೆಸಿದೆ. ದಾಳಿಯ ವೇಳೆ ಅವರ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ರಕ್ತಸ್ರಾವ ಉಂಟಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಶೀಲಾ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ತೀವ್ರ ರಕ್ತಸ್ರಾವದಿಂದಾಗಿ ಆಸ್ಪತ್ರೆಗೆ ತಲುಪುವ ಮುನ್ನವೇ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಕಾಡು ಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.













